ಗೃಹಲಕ್ಷ್ಮಿ ಯೋಜನೆː ಮೊಬೈಲ್‌ನಲ್ಲೇ ಮಾಹಿತಿ ಪಡೆಯಬಹುದು – ಡಿಸಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವೀಡಿಯೋ ಸಂವಾದ

ಗೃಹಲಕ್ಷ್ಮಿ ಯೋಜನೆː ಮೊಬೈಲ್‌ನಲ್ಲೇ ಮಾಹಿತಿ ಪಡೆಯಬಹುದು – ಡಿಸಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವೀಡಿಯೋ ಸಂವಾದ

 


ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ಸಿಗಲಿದೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ವಿಡಿಯೋ ಸಂವಾದ ನಡೆಸಿದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ನೋಂದಣಿ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು ಹಾಗೂ ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡಬಾರದು. ಅಧಿಕಾರಿಗಳು ಸುಗಮ ನೋಂದಣಿಗೆ ಅನುಕೂಲವಾಗುವಂತೆ ಅಗತ್ಯವಿರುವ ಕಂಪ್ಯೂಟರ್, ಇಂಟರ್‌ನೆಟ್ ಸಂಪರ್ಕ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಆದೇಶಿಸಿದರು

ಅಲ್ಲದೇ ನೋಂದಣಿಗೆ ಬರುವ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕು. ಮಳೆಗಾಲ ಇರುವುದರಿಂದ ಸರದಿಯಲ್ಲಿ ನಿಲ್ಲಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ನೋಂದಣಿ ಕೇಂದ್ರಗಳಲ್ಲಿ ಸ್ಥಳೀಯ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನ ನಿಯೋಜಿಸಬೇಕು. ಇದರಿಂದ ನೋಂದಣಿ ಪ್ರಕ್ರಿಯೆ ಮೇಲ್ವಿಚಾರಣೆ ಕೂಡ ಸುಗಮವಾಗಲಿದ್ದು, ಪ್ರತಿ ನೋಂದಣಿ ಕೇಂದ್ರಗಳಲ್ಲಿ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಾಕೀತು ಮಾಡಿದರು.

ಮೊಬೈಲ್‌ನಲ್ಲೇ ಮಾಹಿತಿ ಪಡೆಯೋದು ಹೇಗೆ?
ಪ್ರತಿ ಫಲಾನುಭವಿ ನೊಂದಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು1902 ಕರೆ ಮಾಡಿ ತಿಳಿದುಕೊಳ್ಳಬಹುದು. ಜೊತೆಗೆ ಮೊ.ಸಂ.8147500500 ನಂಬರ್ ಗೆ ಎಸ್‌ಎಂಎಸ್‌ ಅಥವಾ ವಾಟ್ಸಪ್‌ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆದುಕೊಳ್ಳಬಹುದು. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್‌, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5 ರಿಂದ 7ರ ಅವಧಿಯಲ್ಲಿ ಹೋಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ:
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್‌ ಕಾರ್ಡ್‌ ಸಂಖ್ಯೆ ಮತ್ತು ಬ್ಯಾಂಕ್‌ ಖಾತೆಯ ಪಾಸ್‌ ಬುಕ್‌ ಮಾಹಿತಿ ನೀಡಬೇಕು. ಆಧಾರ್‌ ನಂಬರ್‌ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ ಆ ಬ್ಯಾಂಕ್‌ ಖಾತೆಯ ಪಾಸ್‌ಬುಕ್ಕನ್ನೂ ಕೊಡಬೇಕು. ನಿಗದಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಲಿದೆ ಎಂದು ಸಚಿವರು ವಿವರಿಸಿದ್ದಾರೆ.



Post a Comment

Previous Post Next Post
CLOSE ADS
CLOSE ADS
×