ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದರು. ಅಲ್ಲದೆ ಸ್ಥಗಿತಗೊಂಡಿದ್ದ ಅನೇಕ ಯೋಜನೆಗಳನ್ನು ಮರು ಜಾರಿ ಮಾಡಲಾಗಿದೆ. ಸರ್ಕಾರದ ಹೆಚ್ಚಿನ ಸಬ್ಸಿಡಿಯೊಂದಿಗೆ ಇಂದಿರಾ ಕ್ಯಾಂಟೀನ್ ಯೋಜನೆಯನ್ನೂ ಮರು ಜಾರಿ ಮಾಡಲಾಗುತ್ತದೆ ಎಂದರು. ಇನ್ನು ಸಿಎಂ ಭಾಷಣದುದ್ದಕ್ಕೂ ಬುದ್ಧ , ಬಸವ, ಅಂಬೇಡ್ಕರ್, ಕುವೆಂಪು , ಜವಹರಲಾಲ್ ನೆಹರೂ ಸೇರಿದಂತೆ ಕವಿಗಳ ಸಾಲುಗಳನ್ನು ಬಳಸಿಕೊಂಡಿದ್ದಾರೆ
ಬೆಂಗಳೂರು: ಅಭಿವೃದ್ಧಿಯೇ ಸ್ವಾತಂತ್ರ್ಯ ಹೀಗಾಗಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು
ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡಿದರು. ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.
ಅನೇಕ ಮಹಾನ್ ಚೇತನರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲ ಮಹನೀಯರು ಸರ್ವಸ್ವವನ್ನು ತ್ಯಾಗ ಮಾಡಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ. ಬಡವರು ಹಾಗೂ ಶ್ರೀಮಂತರ ನಡುವಿನ ಅಂತರ ಹೆಚ್ಚಾಗಿದೆ. ಸಂಪತ್ತು ಕೇವಲ, ಕೆಲವೇ ಬಂಡವಾಳಶಾಹಿಗಳಲ್ಲಿ ಹಂಚಿಹೋಗಿದೆ. ಹೀಗಾಗಿ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅಭಿವೃದ್ಧಿಯೇ ಸ್ವಾತಂತ್ರ್ಯ ಹೀಗಾಗಿ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು
ಜನರ ತಲಾ ಆದಾಯ ಕುಸಿಯುತ್ತಿತ್ತು, ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯ ಅಳವಡಿಸಿಕೊಂಡು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅಧಿಕಾರಕ್ಕೆ ಬಂದ ಮೊದಲ ದಿನವೇ ಜಾರಿಗೊಳಿಸಿದ್ದೇವೆ. ಮಹಿಳೆಯರ ಸಬಲೀಕರಣಕ್ಕಾಗಿ, 60 ಲಕ್ಷ ಮಹಿಳೆಯರು ಪ್ರತಿನಿತ್ಯ ಅನುಕೂಲ ಪಡೆಯುತ್ತಿರುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಅಂತರಾಷ್ಟ್ರೀಯ ಮಾಧ್ಯಮಗಳ ಮೆಚ್ಚುಗೆ ಗಳಿಸಿದೆ. ಗೃಹಜ್ಯೋತಿ ಯೋಜನೆಯು 2 ಕೋಟಿ ಗ್ರಾಹಕರಿಗೆ ನೆರವಾಗಲಿದೆ. ಹಸಿವುಮುಕ್ತ ಕರ್ನಾಟಕದ ನಿರ್ಮಾಣಕ್ಕಾಗಿ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆ ಎಂದರು.
ಸಿಎಂ ಸಿದ್ದರಾಮಯ್ಯ ಭಾಷಣ
ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮತ್ರ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯೆ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದರು.
ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು.
ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.