ಕರ್ನಾಟಕ, ಸೆಪ್ಟೆಂಬರ್, 09: ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರದ ಮಳೆಯಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಮಾತ್ರ ತಟಸ್ಥವಾಗಿತ್ತು. ಆದರೆ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಜಿನುಗು ಮಳೆಯಾಗಿದ್ದು, ಇದೀಗ ಒಂದು ವಾರದ ಬಳಿಕ ಬಹುತೇಕ ಕಡೆಗಳಲ್ಲಿ ಆಗಾಗ ಜಿನುಗು ಮಳೆ ಮಾತ್ರ ಆಗುತ್ತಿದೆ. ಇನ್ನೂ ಕೆಲವೆಡೆ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಮತ್ತೊಂದೆಡೆ ಇಂದು ಹಲವೆಡೆ ಮಳೆಯಾಗುವ ಮೂನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಳೆ ಒಂದು ವಾರದಿಂದ ರಾಜ್ಯದ ಹಲವೆಡೆ ಜಿನುಗು ಮಳೆ ಆಗುತ್ತಲೇ ಇದ್ದು, ಇಂದು (ಸೆಪ್ಟೆಂಬರ್ 09) ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಕೊಡಗು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಒಂದು ವಾರದಿಂದಲೂ ಆಗಾಗ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕಳೆದ (ಸೆಪ್ಟೆಂಬರ್ 08) ರಾತ್ರಿ ಉಡುಪಿಯಲ್ಲಿ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಅಂದರೆ ಇಂದಿನಿಂದ 6 ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಇಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕೊಡಗು, ಬೀದರ್, ಚಿಕ್ಕಮಗಳೂರು, ಕಲಬುರಗಿಯಲ್ಲೂ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ನೀಡಿದೆ. ಹೀಗೆ ರಾಜ್ಯದ ದಕ್ಷಿಣ ಒಣನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಇದೆ. ಇನ್ನು ಶುಕ್ರವಾರ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿದ್ದು, ಇಂದು ಕೂಡ ಭಾರಿ ಮಳೆ ಸುರಿಯುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಮುನ್ಸೂಚನೆ ಇದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 6 ದಿನಗಳ ಕಾಲ ಏನಾದರೂ ಮಳೆಯಾದರೆ ರೈತರ ಕಳೆಗುಂದಿದ ಮುಖದಲ್ಲಿ ತುಸು ನಗುವಾದರೂ ಮೂಡಲಿದೆ. ಒಂದು ವೇಳೆ ಮಳೆಯಾಗದಿದ್ದರೆ ರೈತರ ಬದುಕು ಮತ್ತಷ್ಟು ಕಂಗೆಟ್ಟಂತಾಗುತ್ತದೆ.