ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಳೆದ ತಿಂಗಳು (ಅ.03ರಂದು) ನಡೆಸಲಾಗಿದ್ದ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೀಗ ನ.06ರ ಬುಧವಾರ ಅಭ್ಯರ್ಥಿಗಳು ಪಡೆದ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಪರೀಕ್ಷೆ ಬರೆದ 42,933 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳಿದ್ದಲ್ಲಿ ನ.9ರೊಳಗೆ ಸಲ್ಲಿಕೆ ಮಾಡುವಂತೆ ಪ್ರಟಣೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಕ್ಟೋಬರ್ ತಿಂಗಳಲ್ಲಿ ನಡೆದ (ದಿನಾಂಕ: 03.10.2024 ರಂದು) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ
ತಾತ್ಕಾಲಿಕ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತ ವೆಬ್‌ಸೈಟ್‌ನಲ್ಲಿ ( https://cetonline.karnataka.gov.in/vaoresult/resultdescomr.aspx ) ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ: 09.11.2024ರ ಸಂಜೆ 5.30 ವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ.